ಚಾಲಕನ ನಿಯಂತ್ರಣ ತಪ್ಪಿ ಬಸ್​​ ಪಲ್ಟಿ: ಓರ್ವ ಮಹಿಳೆ ಸಾವು

ಹುಬ್ಬಳ್ಳಿ: ಬೆಂಗಳೂರಿನಿಂದ ಹುಬ್ಬಳ್ಳಿಗೆ ತೆರಳುತ್ತಿದ್ದ ಖಾಸಗಿ ಬಸ್​​ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದ ಪರಿಣಾಮ ಓರ್ವ ಮಹಿಳೆ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಹುಬ್ಬಳ್ಳಿ ಸಮೀಪದ ಅಗಡಿ ಕ್ರಾಸ್​​ ಬಳಿ ಇಂದು ಬೆಳಗ್ಗೆ ಈ ಘಟನೆ ನಡೆದಿದೆ.
ಮುಂಡಗೋಡ ಸಮೀಪದ ಟಿಬೆಟ್​​ ಕ್ಯಾಂಪ್​​ನ ಲುಪ್​ಸಾನ್​ ಗುಲ್ಮಾ(32) ಮೃತಪಟ್ಟ ಮಹಿಳೆ. ಬೆಂಗಳೂರಿನಿಂದ ಹುಬ್ಬಳ್ಳಿಗೆ ಹೋಗುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ ಈ ದುರ್ಘಟನೆ ಸಂಭವಿಸಿದೆ. ಬಸ್​​ ನಿಯಂತ್ರಣ ತಪ್ಪಿ ರಸ್ತೆ ಪಕ್ಕ ಉರುಳಿದ ಪರಿಣಾಮ ಮಹಿಳೆ ಮೃತಪಟ್ಟಿದ್ದು, 10ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದಾರೆ.
ಗಾಯಗೊಂಡವರನ್ನು ಕಿಮ್ಸ್​​ ಹಾಗೂ ನಗರದ ಖಾಸಗಿ ಆಸ್ಪತ್ರೆಗೆ ರವಾನಿಸಲಾಗಿದೆ. ಹುಬ್ಬಳ್ಳಿ ಗ್ರಾಮೀಣ ಪೊಲೀಸ್​​ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.