‘ಪಾರ್ಕಿಂಗ್​ ಸ್ಥಳದಲ್ಲಿ’ ಪದವಿ ವಿದ್ಯಾರ್ಥಿಗಳ ಪರೀಕ್ಷೆ!

ದಾವಣಗೆರೆ: ಜಿಲ್ಲೆಯಲ್ಲಿ ಪದವಿ ವಿದ್ಯಾರ್ಥಿಗಳು ಪರೀಕ್ಷೆಗೆ ಕುಳಿತುಕೊಳ್ಳಲು ಸಮರ್ಪಕವಾದ ಕೊಠಡಿ ಕೊರತೆ ಎದುರಾಗಿದೆ. ಇತ್ತೀಚೆಗೆ ಹರಪನಹಳ್ಳಿ ಸರ್ಕಾರಿ ಪದವಿ ಕಾಲೇಜಿ​​ನಲ್ಲಿ ಕೊಠಡಿಗಳ ಕೊರತೆಯಿಂದ ವಿದ್ಯಾರ್ಥಿಗಳು ಕಾಲೇಜಿನ ಪಾರ್ಕಿಂಗ್​​ ಸ್ಥಳದಲ್ಲಿ ಪರೀಕ್ಷೆ ಬರೆದಿದ್ದರು. ಇದೇ ರೀತಿಯ ಪ್ರಸಂಗ ಇಂದು ದಾವಣಗೆರೆಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲೂ ನಡೆದಿದೆ.

ಕಾಲೇಜಿನಲ್ಲಿ ಕೊಠಡಿಗಳ ಕೊರತೆ ಎದುರಾದ ಪರಿಣಾಮ ಕಾಲೇಜಿನ ಪಾರ್ಕಿಂಗ್​ ಸ್ಥಳದಲ್ಲಿ ಪರೀಕ್ಷೆ ನಡೆಸಲಾಗುತ್ತಿದೆ. ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ಊಟದ ಟೇಬಲ್,​ ಕುರ್ಚಿಯ ವ್ಯವಸ್ಥೆ ಮಾಡಲಾಗಿದೆ. ಪಾರ್ಕಿಂಗ್​ ಸ್ಥಳದಲ್ಲಿ ಬಿಎ, ಬಿಕಾಂ, ಬಿಎಸ್ಸಿ ಪ್ರಥಮ ವರ್ಷದ 280 ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದಾರೆ. ಕಾಲೇಜಿನಲ್ಲಿ ಒಟ್ಟು 1,600 ವಿದ್ಯಾರ್ಥಿಗಳು ಇದ್ದಾರೆ. ಕಾಲೇಜಿನಲ್ಲಿ ಪರೀಕ್ಷೆ ನಡೆಸಲು ಕೊಠಡಿಗಳ ಕೊರತೆಯಿಂದಾಗಿ ವಿದ್ಯಾರ್ಥಿಗಳು ಕಾಲೇಜು ಆವರಣದಲ್ಲಿ ಪರೀಕ್ಷೆ ಬರೆಯುವ ಸ್ಥಿತಿ ಎದುರಾಗಿದೆ.