ಕಾಂಗ್ರೆಸ್‌ ಶಕ್ತಿ ಪ್ರದರ್ಶನಕ್ಕೆ ಅರಮನೆ ಮೈದಾನ ಸಜ್ಜು..!

ಬೆಂಗಳೂರು: ಕೆಪಿಸಿಸಿ ನೂತನ ಅಧ್ಯಕ್ಷ ದಿನೇಶ್ ಗುಂಡೂರಾವ್, ನಾಳೆ ಜೂನ್‌ 11ರಂದು ಅಧಿಕಾರ ಪದಗ್ರಹಣ ಮಾಡಲಿದ್ದಾರೆ. ಅರಮನೆ ಆವರಣದಲ್ಲಿ ನಾಳೆ ಬೆಳಗ್ಗೆ 10.30ಕ್ಕೆ ಬೃಹತ್ ಸಮಾವೇಶ ನಡೆಸಲು ಕಾಂಗ್ರೆಸ್‌ ತಯಾರಿ ನಡೆಸಿದೆ. ನೂತನ ಕಾಂಗ್ರೆಸ್ ಅಧ್ಯಕ್ಷ ಹಾಗೂ ಕಾರ್ಯಾಧ್ಯಕ್ಷರ ಪದಗ್ರಹಣದ ಮೂಲಕ ಕಾಂಗ್ರೆಸ್‌ ತನ್ನ ಶಕ್ತಿಯನ್ನು ಪ್ರದರ್ಶಿಸಲಿದೆ.
ಸತತ ಎಂಟು ವರ್ಷಗಳಿಂದ ಕೆಪಿಸಿಸಿ ಅಧ್ಯಕ್ಷರಾಗಿದ್ದ ಪರಮೇಶ್ವರ್, ನೂತನ ಅಧ್ಯಕ್ಷ ದಿನೇಶ್ ಗುಂಡೂರಾವ್‌ಗೆ ಅಧಿಕಾರ ಹಸ್ತಾಂತರ ಮಾಡಲಿದ್ದಾರೆ. ಜೊತೆಗೆ, ಕಾರ್ಯಾಧ್ಯಕ್ಷರಾಗಿ ಮಾಜಿ ಸಚಿವ ಈಶ್ವರ್ ಖಂಡ್ರೆ ಪದಗ್ರಹಣ ಮಾಡಲಿದ್ದಾರೆ. ಕಾರ್ಯಕ್ರಮದಲ್ಲಿ ಎಐಸಿಸಿ ನಾಯಕರು ಸೇರಿದಂತೆ ಹಲವು ರಾಜ್ಯ ನಾಯಕರು ಭಾಗಿಯಾಗಲಿದ್ದಾರೆ. ಅಲ್ಲದೇ ಸಾವಿರಾರು ಕಾರ್ಯಕರ್ತರು ಸೇರಲಿದ್ದಾರೆ. ಈ ಹಿನ್ನೆಲೆಯಲ್ಲಿ ಅರಮನೆ ‌ಮೈದಾನದಲ್ಲಿ ಭರ್ಜರಿ ಸಿದ್ಧತೆ ನಡೆದಿದೆ. ಕಾರ್ಯಕ್ರಮಕ್ಕಾಗಿ ಬೃಹತ್ ವೇದಿಕೆ ನಿರ್ಮಾಣಗೊಂಡಿದ್ದು, ಕಾರ್ಯಕ್ರಮಕ್ಕೆ 60 ಸಾವಿರಕ್ಕೂ ಹೆಚ್ಚು ಜನರು ಸೇರುವ ನಿರೀಕ್ಷೆ ಇದೆ. ವೇದಿಕೆಯ ಮೇಲಿನ‌ ಪ್ರಮುಖ ಗಣ್ಯ ವ್ಯಕ್ತಿಗಳಿಗೆ 200 ಆಸನಗಳು ರೆಡಿಯಾಗಿದ್ದು, ವೇದಿಕೆ ಮುಂಭಾಗದಲ್ಲಿ ಗಣ್ಯರಿಗಾಗಿ 700 ವಿಶೇಷ ಆಸನಗಳ ವ್ಯವಸ್ಥೆ ಮಾಡಲಾಗಿದೆ. ಅಲ್ಲದೇ, 30 ಸಾವಿರಕ್ಕೂ ಹೆಚ್ಚು ಜನರಿಗಾಗಿ ಆಸನಗಳ ವ್ಯವಸ್ಥೆ ಮಾಡಲಾಗಿದೆ. ಕಾರ್ಯಕ್ರಮಕ್ಕೆ ಬರುವ ಕಾರ್ಯಕರ್ತರಿಗೆ ಭರ್ಜರಿ ಊಟದ ವ್ಯವಸ್ಥೆಯೂ ಆಗಿದ್ದು, ಅರಮನೆ ‌ಮೈದಾನದ ಸುತ್ತಮುತ್ತ ಕೈ ನಾಯಕರ ಬೃಹತ್ ಫ್ಲೆಕ್ಸ್‌ಗಳು ರಾರಾಜಿಸುತ್ತಿವೆ.

ದಿನೇಶ್ ಗುಂಡೂರಾವ್‌ ರಾಜಕೀಯ ಪಯಣ

ಮಾಜಿ ಸಿಎಂ ಸಿದ್ದರಾಮಯ್ಯ ಸಂಪುಟದಲ್ಲಿ ಆಹಾರ ಮತ್ತು ನಾಗರೀಕ ಪೂರೈಕೆ ಸಚಿವರಾಗಿದ್ದ ದಿನೇಶ್ ಗುಂಡೂರಾವ್ ಅವರನ್ನು ಕೆಪಿಸಿಸಿ ಕಾರ್ಯಾಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ. ಪಕ್ಷ ಸಂಘಟನೆ ಹಿನ್ನೆಲೆಯಲ್ಲಿ ದಿನೇಶ್ ಗುಂಡೂರಾವ್ ರಾಜ್ಯ ಪ್ರವಾಸ ಮಾಡಿದ್ದು, ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಕೆಲಸ ನಿಭಾಯಿಸಿದ್ದರು. ಅಲ್ಲದೇ ರಾಜ್ಯ ಯುವ ನಾಯಕರಾಗಿಯೂ ಗಮನ ಸೆಳೆದಿದ್ದಾರೆ.
ತಂದೆ ಗುಂಡೂರಾವ್ ಮುಖ್ಯಮಂತ್ರಿಯಾಗಿದ್ದಾಗಲೇ ಯುವ ಕಾಂಗ್ರೆಸ್ ಘಟಕದಲ್ಲಿ ತೊಡಗಿಸಿಕೊಂಡಿದ್ದ ದಿನೇಶ್ ಗುಂಡೂರಾವ್, ತಂದೆಯಂತೆಯೇ ಕಾಂಗ್ರೆಸ್‌ನ ನಿಷ್ಠಾವಂತ ಕಾರ್ಯಕರ್ತರಾಗಿದ್ದಾರೆ. ಆರಂಭದಲ್ಲಿ ಕಾಂಗ್ರೆಸ್ ಕಾರ್ಯಕರ್ತನಾಗಿ ಕೆಲಸ ಆರಂಭ ಮಾಡಿದ ಇವರು, ಬಳಿಕ ಯೂತ್ ಕಾಂಗ್ರೆಸ್ ಅಧ್ಯಕ್ಷರಾಗಿದ್ದರು. ಸತತ ಐದು ಬಾರಿ ಶಾಸಕರಾಗಿರುವ ದಿನೇಶ್ ಗುಂಡೂರಾವ್, ಬೆಂಗಳೂರಿನ ಗಾಂಧಿನಗರ ವಿಧಾನಸಭಾ ಕ್ಷೇತ್ರದಿಂದಲೇ ಗೆದ್ದು ಬರುತ್ತಿದ್ದಾರೆ.

ನಿಮ್ಮ ಸಲಹೆ, ಸೂಚನೆ ಮತ್ತು ಅಭಿಪ್ರಾಯಗಳಿಗೆ ಸಂಪರ್ಕಿಸಿ: contact@firstnews.tv