‌ಮಾಜಿ ಶಾಸಕ ಎಂ.ಪಿ. ರವೀಂದ್ರ ಆರೋಗ್ಯಸ್ಥಿತಿ ಗಂಭೀರ: ವಿದೇಶದಲ್ಲಿ ಚಿಕಿತ್ಸೆ?

ದಾವಣಗೆರೆ: ಹರಪನಹಳ್ಳಿ ಕ್ಷೇತ್ರದ ಕಾಂಗ್ರೆಸ್ ‌ಮಾಜಿ ಶಾಸಕ ಎಂ.ಪಿ. ರವೀಂದ್ರ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ. ಕೈ, ಕಾಲು ಊತ (ಬಾವು) ಬಂದ ಹಿನ್ನೆಲೆಯಲ್ಲಿ ಬೆಂಗಳೂರಿನ ವಿಕ್ರಂ ಆಸ್ಪತ್ರೆಗೆ ಚಿಕಿತ್ಸೆಗಾಗಿ ತೆರಳಿದ್ದರು. ಪರೀಕ್ಷಿಸಿದ ವೈದ್ಯರು ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ಪರಿಗಣಿಸಿ ಒಳರೋಗಿಯಾಗಿ ಅವರನ್ನ ತಕ್ಷಣ ದಾಖಲಿಸಿಕೊಂಡಿದ್ದಾರೆ.

ಮಾಜಿ ಉಪ ಮುಖ್ಯಮಂತ್ರಿ ಎಂ.ಪಿ. ಪ್ರಕಾಶ್​ ಅವರ ಪುತ್ರ ಎಂ.ಪಿ.ರವೀಂದ್ರ, ಹರಪನಹಳ್ಳಿ ಕ್ಷೇತ್ರದ ಕಾಂಗ್ರೆಸ್ ‌ಶಾಸಕರಾಗಿ 2013 ರಲ್ಲಿ ಆಯ್ಕೆ ಆಗಿದ್ದರು. 2018ರ ವಿಧಾನಸಭೆ ಚುನಾವಣೆಗೂ ಮೊದಲು ಅನಾರೋಗ್ಯದಿಂದ ಬಳಲುತ್ತಿದ್ದ ರವೀಂದ್ರ ವಿದೇಶದಲ್ಲಿ ಚಿಕಿತ್ಸೆ ಪಡೆದಿದ್ದರು. ಅದೇ ಕಾರಣಕ್ಕೆ ಚುನಾವಣೆಗೆ ಸ್ಪರ್ಧಿಸುತ್ತಿಲ್ಲ ಎಂಬ ಮಾತುಗಳೂ ಕೇಳಿಬಂದಿದ್ದವು.

ಈಗ ಮತ್ತೆ ರವೀಂದ್ರರ ಆರೋಗ್ಯದಲ್ಲಿ ಏರುಪೇರು ಉಂಟಾಗಿದೆ. ಈ ಮೊದಲು ವಿದೇಶದಲ್ಲಿ ಚಿಕಿತ್ಸೆ ಪಡೆದಿದ್ದ ಹಿನ್ನೆಲೆಯಲ್ಲಿ, ಈಗಲೂ ವಿದೇಶಕ್ಕೆ ಹೋಗಿ ಚಿಕಿತ್ಸೆ ಪಡೆಯಲು ಕುಟುಂಬದ ಸದಸ್ಯರು ಚಿಂತನೆ ನಡೆಸಿದ್ದಾರೆ. ಈ ನಿಟ್ಟಿನಲ್ಲಿ ವಿಕ್ರಮ್ ಆಸ್ಪತ್ರೆಯ ವೈದ್ಯರೊಂದಿಗೆ ಚರ್ಚಿಸಿ ಮುಂದಿನ ನಿರ್ಧಾರ ಕೈಗೊಳ್ಳುವುದಾಗಿ ಕುಟುಂಬದ ಮೂಲಗಳು ತಿಳಿಸಿವೆ.

ನಿಮ್ಮ ಸಲಹೆ, ಸೂಚನೆ ಮತ್ತು ಅಭಿಪ್ರಾಯಗಳಿಗೆ ಸಂಪರ್ಕಿಸಿ: contact@firstnews.tv