ಪದವೀಧರ ಕ್ಷೇತ್ರದ ಚುನಾವಣೆ: ಶಾಂತಿಯುತ ಮತದಾನಕ್ಕೆ ರಾಯಚೂರು ಸಿದ್ಧ

ರಾಯಚೂರು: ನಾಳೆ ಜಿಲ್ಲೆಯಾದ್ಯಂತ ನಡೆಯಲಿರುವ ಪದವೀಧರ ಚುನಾವಣೆಯನ್ನು ರಾಯಚೂರು ಜಿಲ್ಲೆಯಲ್ಲಿ ಶಾಂತಿಯುತವಾಗಿ ನಡೆಸಲು ಚುನಾವಣಾಧಿಕಾರಿ (ಜಿಲ್ಲಾಧಿಕಾರಿ) ಗೌತಮ್ ಬಗಾದಿ ಎಲ್ಲಾ ರೀತಿಯ ಸಿದ್ಧತೆ ಮಾಡಿಕೊಂಡಿರುವುದಾಗಿ ತಿಳಿಸಿದ್ದಾರೆ. ನಾಳೆ ಬೆಳಗ್ಗೆ 7 ಗಂಟೆಯಿಂದ ಸಂಜೆ 5 ಗಂಟೆವರೆಗೂ ಮತದಾನ ನಡೆಯಲಿದೆ. ರಾಯಚೂರು ಜಿಲ್ಲೆಯಲ್ಲಿ 8,903 ಪುರುಷ ಮತದಾರರು, 3,103 ಮಹಿಳಾ ಮತದಾರರು ಹಾಗೂ ಒಬ್ಬರು ತೃತೀಯಲಿಂಗಿ ಸೇರಿ ಒಟ್ಟು 12,007 ಮತದಾರರಿದ್ದಾರೆ.

ಪಟ್ಟಣದ ಸ್ಟೇಷನ್ ರಸ್ತೆಯ ಬಾಲಕರ ಸರ್ಕಾರಿ ಪದವಿ ಪೂರ್ವ ಕಾಲೇಜು, ಲಿಂಗಸುಗೂರು ರಸ್ತೆಯ ಪ್ರಥಮ ದರ್ಜೆ ಕಾಲೇಜು, ತಹಶೀಲ್ದಾರ್​ ಕಚೇರಿಯ ಕೊಠಡಿ ಸಂಖ್ಯೆ 1, ಹನುಮಾನ್ ಟಾಕೀಸ್ ಹತ್ತಿರದ ಕರ್ನಾಟಕ ಸಂಘದ ಗ್ರಂಥಾಲಯ ಸೇರಿದಂತೆ ಜಿಲ್ಲೆಯಲ್ಲಿ ಒಟ್ಟು 27 ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. ಪ್ರತಿ ಮತಗಟ್ಟೆಯಲ್ಲಿ ವಿಡಿಯೋ ರೆಕಾರ್ಡಿಂಗ್‌ ವ್ಯವಸ್ಥೆ ಕೂಡ ಮಾಡಲಾಗಿದೆ. ಮತದಾನ ಕರ್ತವ್ಯಕ್ಕೆ ಜಿಲ್ಲೆಯಲ್ಲಿ ಒಟ್ಟು 150 ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಜಿಲ್ಲೆಯಲ್ಲಿ ನಿನ್ನೆ ಸಂಜೆ 5 ಗಂಟೆಯಿಂದ 84 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧಿಸಲಾಗಿದೆ.

ಮತದಾನದ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಶಾಂತಿಯುತವಾಗಿ ನಡೆಯಲು ಪ್ರತಿ ಮತಗಟ್ಟೆಗೆ 3 ಪೊಲೀಸ್ ಸಿಬ್ಬಂದಿಯನ್ನು ನೇಮಿಸಲಾಗಿದೆ. ಸೂಕ್ಷ್ಮ, ಅತೀ ಸೂಕ್ಷ್ಮ ಮತಗಟ್ಟೆಗಳಲ್ಲಿ ಹೆಚ್ಚಿನ ಪೊಲೀಸ್ ಸಿಬ್ಬಂದಿಯನ್ನು ನಿಯೋಜನೆ ಮಾಡಲಾಗಿದ್ದು, ಎಲ್ಲಾ 27 ಮತಗಟ್ಟೆಗಳಲ್ಲಿ ಪೊಲೀಸ್ ಬಿಗಿ ಭದ್ರತೆ ಮಾಡಿಕೊಳ್ಳಲಾಗಿದೆ. ಒಟ್ಟಿನಲ್ಲಿ ಪದವೀಧರ ಕ್ಷೇತ್ರದ ಮತದಾನಕ್ಕೆ ರಾಯಚೂರು ಜಿಲ್ಲೆಯಲ್ಲಿ ಜಿಲ್ಲಾಡಳಿತ ಎಲ್ಲಾ ರೀತಿಯ ಸಿದ್ಧತೆ ಮಾಡಿಕೊಂಡಿದೆ ಎಂದು ಜಿಲ್ಲಾಧಿಕಾರಿ ಗೌತಮ್ ಬಗಾದಿ ತಿಳಿಸಿದ್ದಾರೆ.

ನಿಮ್ಮ ಸಲಹೆ, ಸೂಚನೆ ಹಾಗೂ ಅಭಿಪ್ರಾಯಗಳಿಗೆ ಸಂಪರ್ಕಿಸಿ: contact@firstnews.tv