‘ಸಾಮಾಜಿಕ ನ್ಯಾಯದಡಿ ನನಗೆ ಸಚಿವ ಸ್ಥಾನ ನೀಡಲಾಗಿದೆ’

ದಾವಣಗೆರೆ: ಸಾಮಾಜಿಕ ನ್ಯಾಯದಡಿ ನನಗೆ ಸಚಿವ ಸ್ಥಾನ ನೀಡಲಾಗಿದೆ. ಎಲ್ಲಾ ಸಮಾಜದವರಿಗೂ ಸಮಾನತೆ ಕಾಪಾಡಲಾಗಿದೆ ಎಂದು ಮುಜರಾಯಿ ಖಾತೆ ಸಚಿವ ಪಿಟಿ ಪರಮೇಶ್ವರ್ ನಾಯ್ಕ್ ಹೇಳಿದ್ದಾರೆ.

ದಾವಣಗೆರೆಯ ಲಕ್ಷ್ಮೀಪುರ ತಾಂಡಾದಲ್ಲಿ ಮಾತನಾಡಿರುವ ಅವರು, ಕಾಂಗ್ರೆಸ್‌ನಲ್ಲಿ ಯಾರ ಬಣವೂ ಇಲ್ಲ. ಸಿದ್ದರಾಮಯ್ಯ, ಜಿ.ಪರಮೇಶ್ವರ್, ಡಿ.ಕೆ ಶಿವಕುಮಾರ್ ಎಲ್ಲರ ಬಣವೂ ಒಂದೇ. ಎಲ್ಲರೂ ಒಗ್ಗಟ್ಟಿನಿಂದ ಕೆಲಸ ಮಾಡುತ್ತಿದ್ದೇವೆ. ಬಿಜೆಪಿಯವರಿಂದ ನಮ್ಮ ಸರ್ಕಾರ ಉರುಳಿಸಲು ಸಾಧ್ಯವಿಲ್ಲ. ಸಮ್ಮಿಶ್ರ ಸರ್ಕಾರ ಕೆಡವಲು ಬಿಜೆಪಿಯವರು ತುದಿಗಾಲಲ್ಲಿ ನಿಂತಿದ್ದಾರೆ. ಏನೇ ಮಾಡಿದ್ರೂ ಸರ್ಕಾರ ಭದ್ರವಾಗಿರುತ್ತದೆ ಎಂದು ಪಿ.ಟಿ ಪರಮೇಶ್ವರ್ ನಾಯ್ಕ್ ಹೇಳಿದರು.

ಸುಳ್ವಾಡಿ ವಿಷ ಪ್ರಸಾದ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿರುವ ಅವರು, ಈ ಬಗ್ಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು. ಈಗಾಗಲೇ ಪ್ರಸಾದ ತಯಾರಿ ಬಗ್ಗೆ ನಿಯಮ ಅನುಸರಿಸಲಾಗುತ್ತಿದೆ. ಇದರಿಂದ ತೊಂದರೆಯಾಗುವ ಬಗ್ಗೆ ಮಾಹಿತಿ ಇದೆ. ಈ ಬಗ್ಗೆ ಸಚಿವ ಸಂಪುಟದಲ್ಲಿ ಚರ್ಚಿಸಿ ಸೂಕ್ತ ತೀರ್ಮಾನ ಕೈಗೊಳ್ಳುತ್ತೇವೆ. ಇದು ಸಾಮಾನ್ಯ ಘಟನೆಯಲ್ಲ, ಇದು ಗಂಭೀರವಾದ ವಿಚಾರ. ಇಂಥಹ ಘಟನೆಗಳ ಬಗ್ಗೆ ಎಚ್ಚರಿಕೆ ವಹಿಸಲಾಗುವುದು ಎಂದು ಪರಮೇಶ್ವರ್ ನಾಯ್ಕ್ ಹೇಳಿದರು.

ನಿಮ್ಮ ಸಲಹೆ, ಸೂಚನೆ ಮತ್ತು ಅಭಿಪ್ರಾಯಗಳಿಗೆ ಸಂಪರ್ಕಿಸಿ: conatct@firstnews.tv